ಉತ್ತರ ಪ್ರದೇಶದ ಕಾನ್ಪುರದಲ್ಲಿ ಗುರುವಾರ ತರಬೇತಿ ವಿಮಾನ ಪತನಗೊಂಡು ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದಾಗಿ ತಿಳೀದು ಬಂದಿದೆ.
ಆ.27ರಂದು ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡಿದ್ದು, ಮೃತರಲ್ಲಿ ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆ ಮೂಲದ ಅಭಿಷೇಕ್ ಪೂಜಾರಿ ಅವರೂ ಸೇರಿದ್ದಾರೆ ಎನ್ನಲಾಗಿದೆ.
ಅಭಿಷೇಕ್ ಪೂಜಾರಿ ಅವರು ಕಳೆದ ಸುಮಾರು ಎರಡೂವರೆ ವರ್ಷಗಳಿಂದ ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ಟ್ರೈನಿ ಪೈಲೆಟ್ ಆಗಿ ತರಬೇತಿ ಪಡೆಯುತ್ತಿದ್ದರು ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ. ತರಬೇತಿಯ ಭಾಗವಾಗಿ ವಿಮಾನ ಹಾರಾಟ ನಡೆಸುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಅಭಿಷೇಕ್ ಅವರ ತಂದೆ ಪ್ರಭಾಕರ ಪೂಜಾರಿ ಹಾಗೂ ತಾಯಿ ಶಶಿಕಲಾ ಪೂಜಾರಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿ ವಾಸವಾಗಿದ್ದಾರೆ. ಅಭಿಷೇಕ್ ಅವರು ಕುಟುಂಬದೊಂದಿಗೆ ಆಗಾಗ್ಗೆ ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆಯಲ್ಲಿರುವ ತಾಯಿಯ ಸಹೋದರ ಜೀವನ್ ಕುಮಾರ್ ಅವರ ಮನೆಗೆ ಆಗಮಿಸುತ್ತಿದ್ದರು ಎಂದು ತಿಳಿದುಬಂದಿದೆ.
ಘಟನೆ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಮುಂದಿನ ಪ್ರಕ್ರಿಯೆಗಳಿಗಾಗಿ ಕಾನ್ಪುರಕ್ಕೆ ತೆರಳಿದ್ದಾರೆ. ಮೃತದೇಹದ ಹಸ್ತಾಂತರ ಸೇರಿದಂತೆ ಅಗತ್ಯ ಕಾನೂನು ಪ್ರಕ್ರಿಯೆಗಳು ಹಾಗೂ ಇತರ ಕ್ರಮಗಳು ಸಂಬಂಧಪಟ್ಟ ಅಧಿಕಾರಿಗಳ ನೇತೃತ್ವದಲ್ಲಿ ನಡೆಯುತ್ತಿವೆ ಎಂದು ಮಾಹಿತಿ ಲಭ್ಯವಾಗಿದೆ.
