ಜು.11ರಂದು ಉಡುಪಿಯಲ್ಲಿ ರಾಷ್ಟ್ರೀಯ ಲೋಕ ಅದಾಲತ್: 2 ಸಾವಿರ ಪ್ರಕರಣಗಳ ಇತ್ಯರ್ಥ ಗುರಿ

ಜು.11ರಂದು ಉಡುಪಿಯಲ್ಲಿ ರಾಷ್ಟ್ರೀಯ ಲೋಕ ಅದಾಲತ್: 2 ಸಾವಿರ ಪ್ರಕರಣಗಳ ಇತ್ಯರ್ಥ ಗುರಿ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಜುಲೈ 11ರಂದು ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಿದೆ. ಈ ಲೋಕ ಅದಾಲತ್‌ನಲ್ಲಿ ಕನಿಷ್ಠ 2,000 ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಿತಿನ್ ರಾವ್ ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 34,856 ಪ್ರಕರಣಗಳು ವಿಚಾರಣೆಗೆ ಬಾಕಿ ಇದ್ದು, ಅವುಗಳಲ್ಲಿ ಸಂಧಾನ ಹಾಗೂ ಪರಸ್ಪರ ಮಾತುಕತೆಯ ಮೂಲಕ ಇತ್ಯರ್ಥಗೊಳಿಸಬಹುದಾದ 3,544 ಪ್ರಕರಣಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.

ಈಗಾಗಲೇ 505 ಪ್ರಕರಣಗಳಲ್ಲಿ ರಾಜಿಗೆ ಒಪ್ಪಿಗೆ ದೊರೆತಿದ್ದು, ಉಳಿದ ಪ್ರಕರಣಗಳಲ್ಲಿಯೂ ಸಂಧಾನದ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಇತ್ಯರ್ಥ ಸಾಧಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಕನಿಷ್ಠ 2,000 ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದರು.

ಸಾರ್ವಜನಿಕರು ಲೋಕ ಅದಾಲತ್‌ನಲ್ಲಿ ಭಾಗವಹಿಸುವ ಮೂಲಕ ನ್ಯಾಯಾಲಯದ ವ್ಯಾಜ್ಯಗಳನ್ನು ಶೀಘ್ರ, ಸರಳ ಹಾಗೂ ಕಡಿಮೆ ವೆಚ್ಚದಲ್ಲಿ ಇತ್ಯರ್ಥಪಡಿಸಿಕೊಳ್ಳುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಲೋಕ ಅದಾಲತ್‌ನಲ್ಲಿ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಹಲವು ಪ್ರಕರಣಗಳಿಗೆ ಪರಿಹಾರ ಪಡೆಯುವ ಅವಕಾಶವಿದೆ. ವ್ಯಾಜ್ಯ ಪೂರ್ವ ಹಂತದಲ್ಲಿರುವ ಚೆಕ್ ಅಮಾನ್ಯ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಕಾರ್ಮಿಕ ವಿವಾದಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು ಸೇರಿದಂತೆ ವಿವಿಧ ಪ್ರಕರಣಗಳನ್ನು ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ತಿಳಿಸಿದರು.

ಲೋಕ ಅದಾಲತ್‌ನಲ್ಲಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಆಸಕ್ತರು ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆದುಕೊಳ್ಳಬಹುದು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕಿರಣ್ ಎಸ್. ಗಂಗಣ್ಣವರ್ ಉಪಸ್ಥಿತರಿದ್ದರು.