ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯು ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗೆ ಹೊಸ ಮುನ್ನುಡಿ ಬರೆಯಲಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ತಿಳಿಸಿದ್ದಾರೆ.
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಪ್ರಮುಖ ವಿಚಾರಗಳು ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದ್ದು, ಕರಾವಳಿಗರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸಭೆ ಮಹತ್ವದ ಹೆಜ್ಜೆಯಾಗಲಿದೆ ಎಂದು ಅವರು ಹೇಳಿದ್ದಾರೆ.
ಕರಾವಳಿ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಗರಿಮೆ ಹೊಂದಿದ್ದು, ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಲು ಐಟಿ ಸೇರಿದಂತೆ ವಿವಿಧ ಕಂಪನಿಗಳ ಸ್ಥಾಪನೆಗೆ ಸರ್ಕಾರ ಒತ್ತು ನೀಡಬೇಕಿದೆ. ಈ ಮೂಲಕ ಸ್ಥಳೀಯ ಯುವಕರಿಗೆ ಉದ್ಯೋಗ ಸೃಷ್ಟಿಸುವ ಗುರಿ ಸಾಕಾರಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ಅದನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸುವ ಮೂಲಕ ದೇಶ-ವಿದೇಶಗಳ ಪ್ರವಾಸಿಗರನ್ನು ಆಕರ್ಷಿಸಬೇಕು. ಹೆಚ್ಚಿನ ಬಂಡವಾಳ ಹೂಡಿಕೆಗೂ ಪೂರಕ ವಾತಾವರಣ ನಿರ್ಮಾಣವಾಗಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮೀನುಗಾರಿಕೆ, ಬಂದರುಗಳ ಅಭಿವೃದ್ಧಿ, ಶೀತಲೀಕರಣ ಘಟಕಗಳ ಸ್ಥಾಪನೆ ಸೇರಿದಂತೆ ಕಡಲ ಮಕ್ಕಳ ಬದುಕಿಗೆ ಪೂರಕವಾದ ಯೋಜನೆಗಳನ್ನು ರೂಪಿಸುವ ಮೂಲಕ ಕರಾವಳಿ ಆರ್ಥಿಕತೆಗೆ ಮತ್ತಷ್ಟು ಬಲ ನೀಡಬೇಕಿದೆ ಎಂದಿದ್ದಾರೆ.
ಅರಣ್ಯ ಭೂಮಿ ಸಮಸ್ಯೆ, ಕಡಲ್ಕೊರೆತ, ಕಸ್ತೂರಿರಂಗನ್ ವರದಿ, ಗಣಿಗಾರಿಕೆ, ಕೆಂಪುಕಲ್ಲು ಹಾಗೂ ಮರಳು ಸಮಸ್ಯೆಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆದು, ಶಾಶ್ವತ ಪರಿಹಾರಕ್ಕೆ ನಾಂದಿ ಹಾಡುವ ನಿರೀಕ್ಷೆಯಿದೆ. ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ಕರಾವಳಿ ಅಭಿವೃದ್ಧಿಗೆ ರೂಪುಗೊಳ್ಳುವ ಯೋಜನೆಗಳು ಯಶಸ್ವಿಯಾಗಲಿ ಹಾಗೂ ಆಡಳಿತ ವ್ಯವಸ್ಥೆ ಕರಾವಳಿ ಜನರಿಗೆ ಇನ್ನಷ್ಟು ಹತ್ತಿರವಾಗಲಿ ಎಂದು ಪ್ರಸಾದ್ ರಾಜ್ ಕಾಂಚನ್ ಆಶಿಸಿದ್ದಾರೆ.
