ಶಾರ್ಜಾದಲ್ಲಿ ಕೊಲೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್ ಮೃತದೇಹ ತವರಿಗೆ

ಶಾರ್ಜಾದಲ್ಲಿ ಕೊಲೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್ ಮೃತದೇಹ ತವರಿಗೆ

ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಗೀಡಾಗಿದ್ದ ಕುಂದಾಪುರ ಮೂಲದ ಅಲ್ವಿನ್ ಪ್ರಕಾಶ್ ಕುಂದರ್ ಅವರ ಮೃತದೇಹ ಶುಕ್ರವಾರ ತವರಿಗೆ ತಲುಪಿದೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಮೃತದೇಹವನ್ನು ಕುಂದಾಪುರಕ್ಕೆ ತರಲಾಗಿದ್ದು, ಇಂದು ಅಂತಿಮ ವಿಧಿವಿಧಾನ ನೆರವೇರಿಸಲಾಗುತ್ತಿದೆ.

ಸುಮಾರು ಎರಡು ತಿಂಗಳ ಹಿಂದೆ ಅಲ್ವಿನ್ ಪ್ರಕಾಶ್ ಕುಂದರ್ ಅವರ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಶಾರ್ಜಾದಲ್ಲಿ ಅವರ ಮೃತದೇಹವು ಒಂಬತ್ತು ತುಂಡುಗಳಾಗಿ ಅವರದೇ ಕಾರಿನ ಡಿಕ್ಕಿಯಲ್ಲಿ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಶಾರ್ಜಾ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮೃತದೇಹ ತವರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಕುಂದಾಪುರದ ನಿವಾಸಕ್ಕೆ ರಾಜಕೀಯ ಮುಖಂಡರು ಹಾಗೂ ಗಣ್ಯರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಪ್ರಕರಣದ ಹಿಂದಿರುವ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಘಟನೆ ಬಳಿಕ ಅಲ್ವಿನ್ ಅವರ ಪತ್ನಿ ಟೀನಾ ಕುಂದರ್ ಹಾಗೂ ಪುತ್ರ ನಾಪತ್ತೆಯಾಗಿರುವುದು ಕುಟುಂಬಸ್ಥರಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ. ಇಬ್ಬರ ನಾಪತ್ತೆಯ ಬಗ್ಗೆಯೂ ಸಮಗ್ರ ತನಿಖೆ ನಡೆಸಿ, ಪ್ರಕರಣದ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.

ಕುಂದಾಪುರದ ಶಾಸ್ತ್ರಿ ಸರ್ಕಲ್ ಬಳಿಯ ಚರ್ಚ್ ಆವರಣದಲ್ಲಿ ಅಲ್ವಿನ್ ಪ್ರಕಾಶ್ ಕುಂದರ್ ಅವರ ಅಂತಿಮ ವಿಧಿವಿಧಾನಗಳು ನಡೆಯಲಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.