ಸೌಜನ್ಯ ಪ್ರಕರಣ: ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ

ಸೌಜನ್ಯ ಪ್ರಕರಣ: ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ

ಬೆಂಗಳೂರು: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸಿ ಅಧಿಕೃತ ಆದೇಶ ಹೊರಡಿಸಿದೆ.

ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನದ ಹಿನ್ನೆಲೆಯಲ್ಲಿ ಪ್ರಕರಣದ ಸಮಗ್ರ ಹಾಗೂ ನಿಷ್ಪಕ್ಷಪಾತ ಮರುತನಿಖೆ ನಡೆಸಲು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಐಜಿಪಿ ಎನ್. ಶಶಿಕುಮಾರ್ ಅವರ ನೇತೃತ್ವದಲ್ಲಿ ಎಸ್‌ಐಟಿ ಕಾರ್ಯನಿರ್ವಹಿಸಲಿದೆ.

ತಂಡದಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಐಪಿಎಸ್ ಅಧಿಕಾರಿಗಳಾದ ನಿಶಾ ಜೇಮ್ಸ್, ಲೋಕೇಶ್ ಹಾಗೂ ಎಎಸ್‌ಪಿ ವೆಂಕಟೇಶ್ ಪ್ರಸನ್ನ ಅವರನ್ನು ನಿಯೋಜಿಸಲಾಗಿದೆ.

2012ರಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಈ ಹಿಂದೆ ಸಿಬಿಐ ನಡೆಸಿತ್ತು. ಪ್ರಕರಣದಲ್ಲಿ ಬಂಧಿತನಾಗಿದ್ದ ಏಕೈಕ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿತ್ತು. ಪ್ರಕರಣದ ನೈಜ ಆರೋಪಿಗಳನ್ನು ಪತ್ತೆಹಚ್ಚಿ ಶಿಕ್ಷೆಗೆ ಒಳಪಡಿಸಬೇಕು ಹಾಗೂ ಸಮಗ್ರ ತನಿಖೆ ನಡೆಸಬೇಕು ಎಂದು ಸೌಜನ್ಯ ಅವರ ತಾಯಿ ಕುಸುಮಾವತಿ ಸೇರಿದಂತೆ ಹೋರಾಟಗಾರರು ನಿರಂತರವಾಗಿ ಕಾನೂನು ಹೋರಾಟ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮರುತನಿಖೆಗೆ ನಿರ್ದೇಶನ ನೀಡಿದ್ದು, ಅದರಂತೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಪ್ರಕರಣದ ಎಲ್ಲ ಆಯಾಮಗಳನ್ನು ಪರಿಶೀಲಿಸಿ ಸಮಗ್ರ ತನಿಖೆ ನಡೆಸುವ ಜವಾಬ್ದಾರಿಯನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಲಾಗಿದೆ.