ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ವಿವಿಧ ಇಲಾಖೆಗಳು ಮತ್ತು ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಭಾನುವಾರ ರಾಷ್ಟ್ರೀಯ ಲಸಿಕಾ ದಿನ (ಪಲ್ಸ್ ಪೋಲಿಯೋ) ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣ ಉದ್ಘಾಟಿಸಿ ಮಾತನಾಡಿ, ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪೋಷಕರು ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಕರೆ ನೀಡಿದರು. ಪ್ರತಿಯೊಬ್ಬ ಮಗುವಿಗೂ ಲಸಿಕೆ ತಲುಪಿಸುವ ಮೂಲಕ ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ. ಎ. ಗಫೂರ್, ಜಿಲ್ಲಾ ಸರ್ಜನ್ ಡಾ. ಅಶೋಕ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕಿ ಮಮತಾ ಹಾಗೂ ರೋಟರಿ ಸಂಸ್ಥೆಯ ಪದಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲೆಯಾದ್ಯಂತ ರಾಷ್ಟ್ರೀಯ ಲಸಿಕಾ ದಿನದ ಅಂಗವಾಗಿ ಐದು ವರ್ಷದೊಳಗಿನ ಮಕ್ಕಳಿಗೆ ಉಚಿತ ಪಲ್ಸ್ ಪೋಲಿಯೋ ಲಸಿಕೆ ನೀಡುವ ಕಾರ್ಯ ನಡೆಯುತ್ತಿದ್ದು, ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಪೋಷಕರು ಸಮೀಪದ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
