ಮಣಿಪಾಲ ಪ್ರತಿಭಟನೆ ವೇಳೆ ರಾಷ್ಟ್ರ ಧ್ವಜಕ್ಕೆ ಅಪಮಾನ: ತಪ್ಪಿತಸ್ಥರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಎಸ್‌ಪಿಗೆ ಬಿಜೆಪಿ ಯುವಮೋರ್ಚಾ ಮನವಿ

ಮಣಿಪಾಲ ಪ್ರತಿಭಟನೆ ವೇಳೆ ರಾಷ್ಟ್ರ ಧ್ವಜಕ್ಕೆ ಅಪಮಾನ: ತಪ್ಪಿತಸ್ಥರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಎಸ್‌ಪಿಗೆ ಬಿಜೆಪಿ ಯುವಮೋರ್ಚಾ ಮನವಿ

ಮಣಿಪಾಲದಲ್ಲಿ ಜುಲೈ 24ರಂದು ನಡೆದ ಪ್ರತಿಭಟನೆಯ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದೆ, ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರ ಕಾರ್ಯಕ್ಕೆ ಅಡ್ಡಿಪಡಿಸಿ ಸಾರ್ವಜನಿಕ ಶಾಂತಿ ಕದಡುವ ಕೃತ್ಯಗಳು ನಡೆದಿವೆ ಹಾಗೂ ಭಾರತದ ಪ್ರಧಾನಮಂತ್ರಿಯವರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಲಾಗಿದೆ ಎಂದು ಆರೋಪಿಸಿ, ತಪ್ಪಿತಸ್ಥರ ವಿರುದ್ಧ FIR ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರಿಗೆ ಮನವಿ ಸಲ್ಲಿಸಲಾಯಿತು.

ನಗರ ಯುವಮೋರ್ಚಾ ಅಧ್ಯಕ್ಷ ಶ್ರೀವತ್ಸ ಅವರ ನೇತೃತ್ವದಲ್ಲಿ ಸಲ್ಲಿಸಲಾದ ಮನವಿಯ ಸಂದರ್ಭದಲ್ಲಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರು ಮಣಿಪಾಲದಲ್ಲಿ ನಡೆದ ಪ್ರತಿಭಟನೆಯ ವೇಳೆ ನಡೆದಿರುವುದಾಗಿ ಆರೋಪಿಸಲಾದ ಘಟನೆಗಳ ಕುರಿತು ಎಸ್‌ಪಿಯವರಿಗೆ ವಿವರ ನೀಡಿ, ತಪ್ಪಿತಸ್ಥರ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಶೀಘ್ರದಲ್ಲಿ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಮಣಿಪಾಲ ಪೊಲೀಸ್ ಠಾಣೆ ಎದುರು ಬಿಜೆಪಿ ಯುವಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಗಣೇಶ್, ನಗರ ಯುವಮೋರ್ಚಾ ಉಪಾಧ್ಯಕ್ಷರಾದ ನಿಖಿಲ್ ಮಡಿವಾಳ, ಭೂಷಣ್ ಕುಮಾರ್ ಹಾಗೂ ಶ್ರೀಕಾಂತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಿತಿನ್ ಪೈ, ಮಣಿಪಾಲದ ಪ್ರಸಾದ್ ಗ್ಯಾಂಸ್ಕರ್, ಕಾರ್ಯದರ್ಶಿಗಳಾದ ಹರ್ಷರಾಜ್, ಧನುಷ್ ಕಡಿಯಾಳಿ ಮತ್ತು ದೀಕ್ಷಿತ್ ಶೆಟ್ಟಿ ಉಪಸ್ಥಿತರಿದ್ದರು.