ರಸ್ತೆ ಅಪಘಾತದಲ್ಲಿ ಖ್ಯಾತ ಹುಲಿವೇಷ ಕಲಾವಿದ ಮಂಜುನಾಥ್ ಮೃತ್ಯು

ರಸ್ತೆ ಅಪಘಾತದಲ್ಲಿ ಖ್ಯಾತ ಹುಲಿವೇಷ ಕಲಾವಿದ ಮಂಜುನಾಥ್ ಮೃತ್ಯು

ಗೋವಾದಲ್ಲಿ ಕಾರ್ಯಕ್ರಮ ಮುಗಿಸಿ ಊರಿಗೆ ಮರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖ್ಯಾತ ಹುಲಿವೇಷ ಕಲಾವಿದ ಮೃತಪಟ್ಟಿರುವ ಘಟನೆ ಬುಧವಾರ ಬೆಳಿಗ್ಗೆ ಬ್ರಹ್ಮಾವರ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಸಂತೆಕಟ್ಟೆ ಲಕ್ಷ್ಮಿನಗರ ನಿವಾಸಿ ಮಂಜುನಾಥ್ (43)ಮೃತರು. ಗೋವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಇನ್ನೋವಾ ಕಾರಿನಲ್ಲಿ ನಾಲ್ವರು ಸ್ನೇಹಿತರೊಂದಿಗೆ ವಾಪಸ್ಸಾಗುತ್ತಿದ್ದರು. ಈ ವೇಳೆ ಉಡುಪಿಯತ್ತ ಸಂಚರಿಸುತ್ತಿದ್ದ ವೇಗದೂತ ಬಸ್ ದಿಢೀರ್ ಬ್ರೇಕ್ ಹಾಕಿದ ಪರಿಣಾಮ, ಹಿಂದಿನಿಂದ ಬರುತ್ತಿದ್ದ ಇನ್ನೋವಾ ಕಾರು ನಿಯಂತ್ರಣ ತಪ್ಪಿ ಬಸ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಮಂಜುನಾಥ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಉಳಿದ ನಾಲ್ವರು ಯುವಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಅವರಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದೆ.

ಮಂಜುನಾಥ್ ಅವರು ತುಳುನಾಡಿನ ಹುಲಿವೇಷ ಕಲಾ ಕ್ಷೇತ್ರದಲ್ಲಿ ಚಿರಪರಿಚಿತರಾಗಿದ್ದರು. ಹಲವು ವರ್ಷಗಳಿಂದ ಹುಲಿವೇಷ ಕಲಾವಿದರಿಗೆ ವಿಶಿಷ್ಟ ಪೈಂಟಿಂಗ್ ಮೂಲಕ ಜೀವ ತುಂಬುತ್ತಿದ್ದ ಅವರು, ಅನೇಕ ಕಲಾತಂಡಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಿ ತಮ್ಮದೇ ಆದ ಗುರುತನ್ನು ಮೂಡಿಸಿಕೊಂಡಿದ್ದರು.

ಘಟನಾ ಸ್ಥಳಕ್ಕೆ ಬ್ರಹ್ಮಾವರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಅಪಘಾತದ ಕುರಿತು ಮುಂದಿನ ತನಿಖೆ ಮುಂದುವರಿದಿದೆ.